ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ಎಚ್‌ಡಿಕೆ
x

ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ಎಚ್‌ಡಿಕೆ


ಮಾನವ ಸರಪಳಿ ನೆಪದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ, ಪುಕ್ಕಟೆ ಪ್ರಚಾರ ಗಿಟ್ಟಿಸಿದೆ ಎಂದು ಟೀಕಿಸಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಪ್ರಜಾಪ್ರಭುತ್ವದ ಕುರಿತು ನಿಮಗೆ ನಿಜವಾದ ಕಾಳಜಿ ಇದ್ದರೆ ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವ ಸರಪಳಿ ಗಟ್ಟಿಗೊಳಿಸಿ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ತಾಕೀತು ಮಾಡಿದರು.

ಅಧಿಕಾರಕ್ಕೆ ಬಂದಾಗಿಂದಲೂ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ ಎಂದು ಕಟಕಿಯಾಡಿದ್ದಾರೆ.

ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಕಿಡಿಕಾರಿದರು ಕುಮಾರಸ್ವಾಮಿ, ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Read More
Next Story