
ಪಶ್ಚಿಮ ಏಷ್ಯಾ ಬಿಕ್ಕಟ್ಟು: ತೈಲ, ಅನಿಲ ಮತ್ತು ರಸಗೊಬ್ಬರ ಲಭ್ಯತೆ ಕುರಿತು ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ
ಪ್ರಧಾನಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ, ದೇಶಾದ್ಯಂತ ಅಗತ್ಯ ಸಂಪನ್ಮೂಲಗಳ ನಿರಂತರ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಲು ಆದ್ಯತೆ ನೀಡಲಾಗಿದೆ.
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಸಮರವು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ದೇಶದಲ್ಲಿ ಪೆಟ್ರೋಲಿಯಂ, ಕಚ್ಚಾ ತೈಲ, ಅನಿಲ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಲಭ್ಯತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಪ್ರಧಾನಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ, ದೇಶಾದ್ಯಂತ ಅಗತ್ಯ ಸಂಪನ್ಮೂಲಗಳ ನಿರಂತರ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಲು ಆದ್ಯತೆ ನೀಡಲಾಗಿದೆ.
ಸಚಿವರ ದಂಡು ಭಾಗಿ
ಈ ನಿರ್ಣಾಯಕ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸೇರಿದಂತೆ ಪ್ರಮುಖ ಇಲಾಖೆಗಳ ಹಿರಿಯ ಸಚಿವರು ಪಾಲ್ಗೊಂಡಿದ್ದರು. ಜಾಗತಿಕ ಬೆಳವಣಿಗೆಗಳ ಮೇಲೆ ನಿರಂತರ ನಿಗಾ ಇರಿಸಿರುವ ಕೇಂದ್ರ ಸರ್ಕಾರವು, ದೇಶದ ಇಂಧನ ಭದ್ರತೆಯನ್ನು ಕಾಯ್ದುಕೊಳ್ಳಲು ಮತ್ತು ಗ್ರಾಹಕರು ಹಾಗೂ ಕೈಗಾರಿಕೆಗಳ ಹಿತರಕ್ಷಣೆಗಾಗಿ ಅಗತ್ಯವಿರುವ ಎಲ್ಲಾ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಭೆಯ ಬಳಿಕ ಸರ್ಕಾರ ಸ್ಪಷ್ಟಪಡಿಸಿದೆ.
ಎಲ್‌ಪಿಜಿ ಹಂಚಿಕೆ ಹೆಚ್ಚಳ
ಪೂರೈಕೆ ಬಿಕ್ಕಟ್ಟನ್ನು ಶಮನಗೊಳಿಸುವ ಭಾಗವಾಗಿ, ಸರ್ಕಾರವು ರಾಜ್ಯಗಳಿಗೆ ವಾಣಿಜ್ಯ ಎಲ್‌ಪಿಜಿ ಹಂಚಿಕೆಯ ಪ್ರಮಾಣವನ್ನು ಹೆಚ್ಚಿಸಿದ್ದು, ವಿಶೇಷವಾಗಿ ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆದ್ಯತೆ ನೀಡಿದೆ. ಗೃಹಬಳಕೆ ಮತ್ತು ವಾಣಿಜ್ಯ ಉದ್ದೇಶಗಳಿಗೆ ಹೊಸ ಕೊಳವೆ ನೈಸರ್ಗಿಕ ಅನಿಲ (ಪಿಎನ್‌ಜಿ) ಸಂಪರ್ಕ ಒದಗಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಲಾಗಿದೆ. ಇದರ ಜೊತೆಗೆ ಅಕ್ರಮ ಎಲ್‌ಪಿಜಿ ದಾಸ್ತಾನು ಮತ್ತು ಕಾಳಸಂತೆಕೋರರ ವಿರುದ್ಧ ಬಿಗಿ ಕ್ರಮ ಜರುಗಿಸಲಾಗುತ್ತಿದೆ. ದೇಶದ ಎಲ್ಲಾ ಪ್ರಮುಖ ಬಂದರುಗಳಲ್ಲಿ ಕಾರ್ಯಾಚರಣೆ ಸಹಜವಾಗಿದ್ದು, ಯಾವುದೇ ದಟ್ಟಣೆ ಇಲ್ಲ. ತೈಲ ಪೂರೈಕೆ ಹೆಚ್ಚಿಸಲು ಅಮೆರಿಕದ ಟೆಕ್ಸಾಸ್‌ನಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಹೊತ್ತ ಬೃಹತ್ ಹಡಗು ಕರ್ನಾಟಕದ ನವಮಂಗಳೂರು ಬಂದರಿಗೆ ಯಶಸ್ವಿಯಾಗಿ ಆಗಮಿಸಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಗಿದೆ.
ಕಡಲಿನಲ್ಲಿ ನಾವಿಕರು ಸುರಕ್ಷಿತ, ನಿರಂತರ ನಿಗಾ
ಇರಾನ್ ಯುದ್ಧದ ಪರಿಣಾಮವಾಗಿ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಜಾಗತಿಕ ಹಡಗು ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಈ ಕುರಿತು ಅಂತರ-ಸಚಿವಾಲಯ ಸಭೆಯಲ್ಲಿ ಮಾಹಿತಿ ನೀಡಿದ ಶಿಪ್ಪಿಂಗ್ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿನ್ಹಾ, ಪ್ರಸ್ತುತ ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿ ಸಂಚರಿಸುತ್ತಿರುವ ಎಲ್ಲಾ 22 ಭಾರತೀಯ ಧ್ವಜಧಾರಿ ಹಡಗುಗಳು ಮತ್ತು ಅದರಲ್ಲಿರುವ 611 ನಾವಿಕರು ಸಂಪೂರ್ಣವಾಗಿ ಸುರಕ್ಷಿತವಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಹಾಗೂ ಅಧಿಕಾರಿಗಳ ತಂಡವು ನಿರಂತರವಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ ಎಂದು ಅಭಯ ನೀಡಿದ್ದಾರೆ.

