K.C. Valley - H.N. Valley water purification, Chikkaballapura bandh
x

ಬಂದ್‌ನಿಂದಾಗಿ ವಾಹನಗಳ ಸಂಚಾರವಿಲ್ಲದೇ ಬಿಕೋ ಎನ್ನುತ್ತಿರುವ ರಸ್ತೆ

KC Valley| ಬೆಂಗಳೂರು ತ್ಯಾಜ್ಯ ನೀರಿನ 3ನೇ ಹಂತದ ಶುದ್ಧೀಕರಣಕ್ಕೆ ಆಗ್ರಹಿಸಿ ಚಿಕ್ಕಬಳ್ಳಾಪುರ ಬಂದ್

ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಪ್ರಸ್ತುತ ಎರಡನೇ ಹಂತದಲ್ಲಿ ಶುದ್ಧೀಕರಿಸಿದ ಬೆಂಗಳೂರಿನ ತ್ಯಾಜ್ಯನೀರನ್ನು ಕೆಸಿ ವ್ಯಾಲಿ ಯೋಜನೆ ಮೂಲಕ ಕೆರೆಗಳಿಗೆ ತುಂಬಿಸಲಾಗುತ್ತಿದೆ.


Click the Play button to hear this message in audio format

ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕೆರೆಗಳಿಗೆ ಕೆ.ಸಿ.ವ್ಯಾಲಿ ಹಾಗೂ ಎಚ್.ಎನ್. ವ್ಯಾಲಿ ಯೋಜನೆಯಡಿ ಹರಿಸುತ್ತಿರುವ ಬೆಂಗಳೂರಿನ ತ್ಯಾಜ್ಯ ನೀರನ್ನು ಮೂರನೇ ಹಂತದ ಶುದ್ಧೀಕರಣಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಭಾನುವಾರ ಚಿಕ್ಕಬಳ್ಳಾಪುರ ನಗರ ಬಂದ್‌ಗೆ ಕರೆ ನೀಡಿವೆ.

ಪ್ರಸ್ತುತ ಎರಡನೇ ಹಂತದಲ್ಲಿ ಶುದ್ಧೀಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸಲಾಗುತ್ತಿದೆ. ಈ ನೀರಿನಲ್ಲಿ ಅಪಾಯಕಾರಿ ಲವಣಾಂಶಗಳು ಮತ್ತು ರಾಸಾಯನಿಕಗಳು ಇರುವುದರಿಂದ ಅಂತರ್ಜಲ ಕಲುಷಿತಗೊಳ್ಳುತ್ತಿದೆ ಎಂಬುದು ಹೋರಾಟಗಾರರ ಆತಂಕವಾಗಿದೆ.

ಅನಾರೋಗ್ಯ ಹೆಚ್ಚಳ

2026ರ ರಾಜ್ಯ ಬಜೆಟ್‌ನಲ್ಲಿ ಈ ಯೋಜನೆಯ ಮೂರನೇ ಹಂತದ ಶುದ್ಧೀಕರಣ ಘಟಕ ಸ್ಥಾಪನೆಗೆ ಯಾವುದೇ ಅನುದಾನ ಮೀಸಲಿಡದ ಕಾರಣ ಸರ್ಕಾರಕ್ಕೆ ಚುರುಕು ಮುಟ್ಟಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕಲುಷಿತ ನೀರಿನ ಬಳಕೆಯಿಂದ ಜಿಲ್ಲೆಯ ಜನರಲ್ಲಿ ಮತ್ತು ಜಾನುವಾರುಗಳಲ್ಲಿ ಅನಾರೋಗ್ಯ ಕಾಣಿಸಿಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಸಂದೀಪ್‌ ರೆಡ್ಡಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಸ್ವಯಂ ಪ್ರೇರಿತ ಬಂದ್‌

ಬಂದ್ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳಾದ ಬಿ.ಬಿ. ರಸ್ತೆ, ಎಂ.ಜಿ. ರಸ್ತೆ ಮತ್ತು ಬಜಾರ್ ರಸ್ತೆಗಳಲ್ಲಿ ಬೆಳಿಗ್ಗೆಯಿಂದಲೇ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದೆ. ಬಹುತೇಕ ಅಂಗಡಿಗಳು ಸ್ವಯಂಪ್ರೇರಿತವಾಗಿ ಬಾಗಿಲು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿವೆ. ಚಿಕ್ಕಬಳ್ಳಾಪುರ ಸುತ್ತಮುತ್ತಲಿನ ಹಳ್ಳಿಗಳಿಂದ ಜನರು ಆಗಮಿಸಿ, ಶಿಡ್ಲಘಟ್ಟ ವೃತ್ತದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬಂದ್‌ಗೆ ಬಿಜೆಪಿ ಬೆಂಬಲ

ಬೆಳಿಗ್ಗೆಯೇ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ ನೇತೃತ್ವದಲ್ಲಿ ಬೈಕ್ ರ‍್ಯಾಲಿ ಮತ್ತು ಪಾದಯಾತ್ರೆ ನಡೆಸಲಾಯಿತು. ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌, ಕನ್ನಡಪರ ಸಂಘಟನೆಗಳು, ರೈತ ಸಂಘಗಳು ಮತ್ತು ಆಟೋ ಚಾಲಕರ ಸಂಘಗಳ ಸದಸ್ಯರು ಪಾಲ್ಗೊಂಡು ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌

ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರದಲ್ಲಿ ಭಾಗಶಃ ವ್ಯತ್ಯಯ ಕಂಡುಬಂದಿದ್ದು, ಆಟೋಗಳ ಓಡಾಟ ಕಡಿಮೆ ಇತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೆ.ಸಿ. ವ್ಯಾಲಿ ಹಾಗೂ ಎಚ್‌.ಎನ್‌. ವ್ಯಾಲಿಯಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕೆರೆಗಳಿಗೆ ಹರಿಸುತ್ತಿರುವ ನೀರಿನಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ʼದ ಫೆಡರಲ್‌ ಕರ್ನಾಟಕʼ ಪ್ರತ್ಯಕ್ಷ ವರದಿ ಮಾಡಿತ್ತು.

Read More
Next Story