ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ಮೊಹಮ್ಮದ್ ಸಲೀಂಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ!
x

ತನಿಖೆ ನಡೆಸಿದ ಇನ್ಸ್‌ಪೆಕ್ಟರ್ ಕಿರಣ್ ಕುಮಾರ್ ಬಿ ನಾಯ್ಕ, ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಶ್ರಮಿಸಿದ ಪಿಎಸ್‌ಐ ಮೊಹಮ್ಮದ್ ಅಲಿ ಇಮ್ರಾನ್ ಮತ್ತು ಕೋರ್ಟ್ ಸಿಬ್ಬಂದಿಗಳ ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ಮೊಹಮ್ಮದ್ ಸಲೀಂಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ!

ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದ ಆರೋಪಿಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.


ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಚಾಕುವಿನಿಂದ ಗಂಭೀರ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ಮೊಹಮ್ಮದ್ ಸಲೀಂ ಎಂಬಾತನಿಗೆ ಬೆಂಗಳೂರಿನ 20ನೇ ಸಿಸಿಹೆಚ್ ನ್ಯಾಯಾಲಯವು 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

2021ರ ಜೂನ್ 24ರಂದು ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಿಂಗ್ ರೋಡ್‌ನ ಸರ್ವಿಸ್ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಮೊಹಮ್ಮದ್ ಸಲೀಂ ಕಾರಿನಲ್ಲಿ ಸಂಚರಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಹೆಚ್.ಬಿ.ಆರ್ ಲೇಔಟ್‌ನ ಅರಣ್ಯ ಇಲಾಖೆ ಕಚೇರಿ ಬಳಿ ಆತನನ್ನು ಅಡ್ಡಗಟ್ಟಿದ್ದರು. ಈ ವೇಳೆ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯು, ತನ್ನ ಬಳಿಯಿದ್ದ ಚಾಕುವಿನಿಂದ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದನು. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ (IPC 307) ಮತ್ತು ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಮತ್ತು ಸಾಕ್ಷ್ಯಾಧಾರ

ಪೂರ್ವ ವಿಭಾಗದ ಅಂದಿನ ಡಿಸಿಪಿ ಡಾ. ಶರಣಪ್ಪ ಎಸ್.ಡಿ. ಅವರ ಮಾರ್ಗದರ್ಶನದಲ್ಲಿ, ಅಂದಿನ ಡಿ.ಜೆ. ಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಕಿರಣ್ ಕುಮಾರ್ ಬಿ. ನಾಯ್ಕ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪೊಲೀಸರ ಮೇಲೆ ಹಲ್ಲೆ ನಡೆಸಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸರ್ಕಾರದ ಪರವಾಗಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕ ಶಿವಕುಮಾರ್ ಅವರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯವು, ಆರೋಪಿಯನ್ನು ದೋಷಿ ಎಂದು ಘೋಷಿಸಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಕಾರ್ಯಾಚರಣೆಗೆ ಪ್ರಶಂಸೆ

ಈ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ ಇನ್ಸ್‌ಪೆಕ್ಟರ್ ಕಿರಣ್ ಕುಮಾರ್ ಬಿ. ನಾಯ್ಕ, ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಶ್ರಮಿಸಿದ ಪಿಎಸ್‌ಐ ಮೊಹಮ್ಮದ್ ಅಲಿ ಇಮ್ರಾನ್ ಮತ್ತು ಕೋರ್ಟ್ ಸಿಬ್ಬಂದಿಯ ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Read More
Next Story