ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ: ಡಿ.ಕೆ. ಶಿವಕುಮಾರ್
x
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರ ಪರವಾಗಿ ಅವರ ತಂದೆ, ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಂದ ಸದಾಶಿವನಗರ ನಿವಾಸದಲ್ಲಿ ಭಾನುವಾರ ಬಿ ಫಾರಂ ಸ್ವೀಕರಿಸಿದರು.

ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ: ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೋಮವಾರ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.


Click the Play button to hear this message in audio format

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಕಾಂಗ್ರೆಸ್ ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದ ಬೆಳವಣಿಗೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ.

ಜನಸಂಖ್ಯೆಯ ಆಧಾರದ ಮೇಲೆ ಮತ್ತು ತಮ್ಮ ಸಮುದಾಯದ ಪ್ರಾತಿನಿಧ್ಯಕ್ಕಾಗಿ ಅವರು ಟಿಕೆಟ್ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಆಕಾಂಕ್ಷೆಗಳನ್ನು ಹೊಂದುವುದು ಸಹಜ ಪ್ರಕ್ರಿಯೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಭಾನುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡಾಯದ ಯಾವುದೇ ಸುಳಿವಿಲ್ಲ ಎಂದು ಹೇಳಿದ್ದಾರೆ.

ಒಮ್ಮತದ ತೀರ್ಮಾನ: ಶಾಮನೂರು ಕುಟುಂಬಕ್ಕೆ ಅವಕಾಶ

ಮುಸ್ಲಿಂ ನಾಯಕರ ವಿರೋಧದ ನಡುವೆಯೂ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, "ನಾನು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹಿರಿಯ ಮುಸ್ಲಿಂ ನಾಯಕರಾದ ಜಮೀರ್ ಅಹ್ಮದ್, ನಾಸೀರ್ ಹುಸೇನ್, ಸಲೀಂ ಅಹ್ಮದ್, ಹ್ಯಾರಿಸ್ ಹಾಗೂ ಜಬ್ಬಾರ್ ಅವರೊಂದಿಗೆ ಸಮಾಲೋಚನೆ ನಡೆಸಿಯೇ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ" ಎಂದು ಹೇಳಿದರು. ದಾವಣಗೆರೆ ಅಭಿವೃದ್ಧಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಶಾಮನೂರು ಕುಟುಂಬದ ಕೊಡುಗೆ ಅಪಾರವಾಗಿದೆ. ಅವರು ವಿದ್ಯಾಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದಾರೆ, ಬಡವರಿಗೆ ಸೂರು ಕಲ್ಪಿಸಿದ್ದಾರೆ. ಈ ಎಲ್ಲಾ ಲೆಕ್ಕಾಚಾರಗಳ ಆಧಾರದ ಮೇಲೆ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ. ಅಲ್ಪಸಂಖ್ಯಾತ ನಾಯಕರಿಗೆ ಪರ್ಯಾಯ ವ್ಯವಸ್ಥೆಗಳನ್ನು (ಉದಾಹರಣೆಗೆ ಎಂಎಲ್‌ಸಿ ಸ್ಥಾನ) ಕಾಲಕಾಲಕ್ಕೆ ಮಾಡಲಾಗುತ್ತಲೇ ಇದೆ ಎಂದು ಅವರು ವಿವರಿಸಿದರು.

ಬಾಗಲಕೋಟೆಯಲ್ಲಿಯೂ ಶಮನಗೊಂಡ ಭಿನ್ನಮತ

ಬಾಗಲಕೋಟೆ ಕ್ಷೇತ್ರದಲ್ಲಿಯೂ ದಿವಂಗತ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದೊಳಗೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಇದ್ದದ್ದನ್ನು ಶಿವಕುಮಾರ್ ಒಪ್ಪಿಕೊಂಡರು. "ಮೇಟಿ ಅವರ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ನಾಲ್ಕು ಜನ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ನನಗೆ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡುವ ಆಸೆಯಿತ್ತು, ಆದರೆ ಅಂತಿಮವಾಗಿ ಹೈಕಮಾಂಡ್ ಸೂಚನೆ ಹಾಗೂ ಒಮ್ಮತದ ಮೇರೆಗೆ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಕುಟುಂಬದವರೇ ನಾಲ್ಕು ಮಂದಿ ಆಕಾಂಕ್ಷಿಗಳಿದ್ದಾಗ, ಪಕ್ಷದ ಇತರ ಕಾರ್ಯಕರ್ತರಿಗೂ ಟಿಕೆಟ್ ಆಸೆ ಇರುವುದು ಸಹಜ" ಎಂದು ಅವರು ವ್ಯಾಖ್ಯಾನಿಸಿದರು.

ಸೋಮವಾರ ಉಭಯ ನಾಯಕರಿಂದ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಸಮಾರಂಭವು ಸೋಮವಾರ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವಿಬ್ಬರೂ ದಾವಣಗೆರೆ ಮತ್ತು ಬಾಗಲಕೋಟೆಗೆ ಖುದ್ದಾಗಿ ತೆರಳಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟಗಳು ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, "ಅವರಲ್ಲಿಯೇ ಒಮ್ಮತವಿಲ್ಲ, ಇಬ್ಬರು ಗಲಾಟೆ ಮಾಡಿಕೊಂಡಿದ್ದಕ್ಕೆ ಮೂರನೆಯವರಿಗೆ ಟಿಕೆಟ್ ನೀಡಿದ್ದಾರೆ. ನಾವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ, ಎರಡೂ ಕ್ಷೇತ್ರಗಳನ್ನು ನಮ್ಮದಾಗಿಸಿಕೊಳ್ಳಲಿದ್ದೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read More
Next Story